Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಶಕ್ತಿನಗರದ ವಿದ್ಯಾಸಂಸ್ಥೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಬೇಸಿಗೆ ಶಿಬಿರ

ಮಂಗಳೂರು : ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯ ಶಕ್ತಿ ವಸತಿ ಶಾಲೆಯ ಮಕ್ಕಳಿಗಾಗಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಎರಡು ದಿನಗಳ ಬೇಸಿಗೆ ಶಿಬಿರ ಆಯೋಜಿಸಲಾಗಿದೆ. ಇದರ ಉದ್ಘಾಟನಾ ಕಾರ್ಯಕ್ರಮವು ದಿನಾಂಕ 29 ರಂದು ಶಕ್ತಿ ವಿದ್ಯಾ ಸಂಸ್ಥೆಯ ರೇಷ್ಮಾ ಮೇಮೋರಿಯಲ್ ಆಡಿಟೋರಿಯಂನಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್‌ನ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಪ್ರತಿಮ್ ಕುಮಾರ್, ದೇಶ-ರಕ್ಷಣೆಗೆ ’ಸ್ಕೌಟ್ಸ್ ಮತ್ತು ಗೈಡ್ಸ್’ನ ಕೊಡುಗೆ ಅಪಾರವಾಗಿದೆ. ಅನೇಕ ಐ.ಎ.ಎಸ್ ಮತ್ತು ಐ.ಪಿ.ಎಸ್ ಅಧಿಕಾರಿಗಳು ಸ್ಕೌಟ್ಸ್ ಮತ್ತು ಗೈಡ್ಸ್‌ನ ವಿದ್ಯಾರ್ಥಿಗಳಾಗಿದ್ದರು. ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಭಾಗವಹಿಸಿದ ಅನೇಕ ಪ್ರಮುಖ ಸೇನಾಧಿಕಾರಿಗಳೂ ಸಹ ಸ್ಕೌಟ್ಸ್ ಮತ್ತು ಗೈಡ್ಸ್‌ನ ವಿದ್ಯಾರ್ಥಿಗಳಾಗಿದ್ದಾರೆ. ಸ್ಕೌಟ್ಸ್ ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಸಂಯಮವನ್ನು ರೂಢಿಸಿಕೊಳ್ಳಲು ಸಹಕಾರಿಯಾಗಿಸುತ್ತದೆ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದ ನಾರಾಯಣ ಶೇರಿಗಾರರು ಶಕ್ತಿ ವಿದ್ಯಾಸಂಸ್ಥೆ ಅನೇಕ ವರ್ಷಗಳಿಂದ ಸ್ಕೌಟ್ಸ್ ಮತ್ತು ಗೈಡ್ಸ್‌ನ ಜೊತೆಗೆ ಅತ್ಯಂತ ಒಳ್ಳೆಯ ರೀತಿಯಲ್ಲಿ ಸಹಕರಿಸುತ್ತಿದೆ ಎಂದು ಹೇಳಿದರು.

ಶಕ್ತಿ ವಿದ್ಯಾಸಂಸ್ಥೆಯ ಪ್ರಧಾನ ಸಲಹೆಗಾರ ರಮೇಶ್ ಕೆ. ಮಾತನಾಡಿ ನಾನು ಸಹ ಬಾಲ್ಯದಲ್ಲಿ ಕ್ಯಾಂಪ್‌ಗಳಲ್ಲಿ ಭಾಗವಹಿಸಿದ್ದೆ. ನಿಮ್ಮನ್ನು ನೋಡುವಾಗ ಆ ಬಾಲ್ಯದ ದಿನಗಳು ನೆನಪಾಗುತ್ತವೆ. ಕ್ಯಾಂಪ್‌ಗಳು ವಿದ್ಯಾರ್ಥಿಗಳಲ್ಲಿ ಮನೋಸ್ಥೈರ್ಯವನ್ನು ಗಟ್ಟಿಗೊಳಿಸುತ್ತದೆ ಎಂದು ನುಡಿದರು.

ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ಬಬಿತಾ ಸೂರಜ್ ಮಾತನಾಡಿ ಎಲ್ಲ ವಿದ್ಯಾರ್ಥಿಗಳೂ ಮನೆಯಲ್ಲಿ ರಜೆಯನ್ನು ಕಳೆಯುತ್ತಿರುವಾಗ ನೀವು ಸ್ವಇಚ್ಚೆಯಿಂದ ಈ ಶಿಬಿರದಲ್ಲಿ ಭಾಗವಹಿಸುತ್ತಿರುವುದು ಶ್ಲಾಘನೀಯ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಶಕ್ತಿ ವಿದ್ಯಾಸಂಸ್ಥೆಯ ಸಂಸ್ಥಾಪಕ ಡಾ.ಕೆ.ಸಿ.ನಾಕ್, ಮಂಗಳೂರು ದಕ್ಷಿಣ ಸ್ಕೌಟ್ಸ್ ಗೈಡ್ಸ್‌ನ ಖಜಾಂಜಿ ಶೀಮತಿ ಸಂಧ್ಯಾ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ಹಾಗೂ ಕಬ್ಸ್ ಮಾಸ್ಟರ್ ಶರಣಪ್ಪ ಕಾರ್ಯಕ್ರಮ ನಿರೂಪಿಸಿದರು. ಎರಡು ದಿನಗಳ ಕಾರ್ಯಕ್ರಮದಲ್ಲಿ ಅಡ್ವೆಂಚರ್ ಆಕ್ಟಿವಿಟೀಸ್‌ಗಳು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ೧೬೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಬ್ಸ್, ಬುಲ್ ಬುಲ್ಸ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ವಿಭಾಗಗಳಿಂದ ಶಿಬಿರದಲ್ಲಿ ಭಾಗವಹಿಸಿದ್ದಾರೆ. ಶಿಬಿರಾಧಿಕಾರಿಗಳಾಗಿ ಅತ್ಯುತ್ತಮವಾಗಿ ಶಿಬಿರವನ್ನು ಆಯೋಜಿಸಿರುವ ದೈಹಿಕ ಶಿಕ್ಷಣ ನಿರ್ದೆಶಕಿ ಸುರೇಖಾ, ವಿಜ್ಞಾನ ಶಿಕ್ಷಕಿ ಭವ್ಯಶ್ರೀ ಹಾಗೂ ಪ್ರೇಮಲತಾ ಮತ್ತು ಶರಣಪ್ಪ ಅವರನ್ನು ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರು ಅಭಿನಂದಿಸಿದ್ದಾರೆ.